top of page

ಅಶ್ಲೀಲ ಪದ ಬಳಕೆ ಪ್ರಕರಣ: ಬಿಜೆಪಿ MLC ಸಿ.ಟಿ ರವಿಗೆ ಬಿಗ್ ರಿಲೀಫ್; ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶ

  • Writer: new waves technology
    new waves technology
  • Dec 20, 2024
  • 1 min read

ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ನಲ್ಲಿ ತನ್ನ ವಿರುದ್ಧ ಸಿ.ಟಿ ರವಿ ಅವಹೇಳನಾಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಹೆಬ್ಬಾಳ್ಕರ್ ದೂರು ದಾಖಲಿಸಿದ್ದರು.

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಘಟನೆ ರಾಜ್ಯದ ನಾಗರಿಕರಿಗೆ ಅತ್ಯಂತ ದುರದೃಷ್ಟಕರವಾದದ್ದು ಎಂದು ಪರಿಗಣಿಸಿದ ನ್ಯಾಯಾಲಯ, ಅಗತ್ಯವಿರುವಾಗ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ, ಸಿಟಿ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಪೊಲೀಸರಿಗೆ ಸೂಚಿಸಿತು.

ಪೊಲೀಸರು ಕಾನೂನು ಕ್ರಮ ಅನುಸರಿಸದೆ ಬಂಧಿಸಿರುವುದನ್ನು ಪ್ರಶ್ನಿಸಿ ಜಾಮೀನು ಅರ್ಜಿ ಸಲ್ಲಿಸಿದ್ದ ಸಿಟಿ ರವಿ ತಾನು ಬಿಡುಗಡೆಗೆ ಅರ್ಹ ಎಂದು ಹೇಳಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ಜಿ. ಉಮಾ ಅವರನ್ನೊಳಗೊಂಡ ನ್ಯಾಯಪೀಠ ಮಧ್ಯಂತರ ಆದೇಶ ನೀಡಿತು.


ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ನಲ್ಲಿ ತನ್ನ ವಿರುದ್ಧ ಸಿ.ಟಿ ರವಿ ಅವಹೇಳನಾಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಹೆಬ್ಬಾಳ್ಕರ್ ದೂರು ದಾಖಲಿಸಿದ್ದರು. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖಿಸಲಾಗಿತ್ತು. ಎಫ್ ಐಆರ್ ದಾಖಲಾದ ಬಳಿಕ ಸಿಟಿ ರವಿ ಅವರನ್ನು ಬಂಧಿಸಲಾಗಿತ್ತು.

ಪ್ರತಿವಾದ ಮಂಡಿಸಿದ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಬೆಳ್ಳಿಯಪ್ಪ, ಬಂಧನಕ್ಕೂ ಮುನ್ನ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆಯೇ ಎಂಬ ಬಗ್ಗೆ ಮಾಹಿತಿ ಬಂದಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಟಿ ರವಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಬಾಕಿಯಿದ್ದು, ಅವರಿಗೆ ಜಾಮೀನು ನೀಡದಂತೆ ಮನವಿ ಮಾಡಿದರು. ಅಂತಿಮವಾಗಿ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ನ್ಯಾಯಾಧೀಶರು ಆದೇಶ ಪ್ರಕಟಿಸಿದರು.


ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಹಿಸಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದರು. ಈ ಮಧ್ಯೆಯೇ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿತ್ತು. ಈ ಮಧ್ಯೆಯೇ ಸಿಟಿ ರವಿ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

Comments


bottom of page