top of page

ನಟ ದರ್ಶನ್, ಇತರರಿಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಬೆಂಗಳೂರು ಪೊಲೀಸ್ ಕಮಿಷನರ್

  • Writer: new waves technology
    new waves technology
  • Dec 17, 2024
  • 1 min read

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಮಂಗಳವಾರ ತಿಳಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ದಯಾನಂದ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕ ಸದಸ್ಯಪೀಠ ಆರೋಪಿ ನಂಬರ್ 1 ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡ, 2ನೇ ಆರೋಪಿಯಾಗಿರುವ ದರ್ಶನ್‌, ಇತರ ಆರೋಪಿಗಳಾದ ಆರ್ ನಾಗರಾಜು, ಅನು ಕುಮಾರ್ ಅಲಿಯಾಸ್ ಅನು, ಲಕ್ಷ್ಮಣ್ ಎಂ, ಜಗದೀಶ್ ಅಲಿಯಾಸ್ ಜಗ್ಗ ಮತ್ತು ಪ್ರದೂಷ್ ಎಸ್ ರಾವ್ ಅವರಿಗೆ ಕಳೆದ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜೂನ್ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಇದೇ ಅವಧಿಯಲ್ಲಿ ಪವಿತ್ರಾ ಗೌಡ ಸೇರಿ 15 ಸಹ ಆರೋಪಿಗಳನ್ನು ಬಂಧಿಸಲಾಗಿತ್ತು.


47 ವರ್ಷದ ನಟ ದರ್ಶನ್ ಈಗಾಗಲೇ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದರು. ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈಕೋರ್ಟ್ ಅವರಿಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು. ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ನಂತರ ಅವರು ಅಕ್ಟೋಬರ್ 30 ರಂದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು.

ಮೊದಲ ಆರೋಪಿ ಪವಿತ್ರಾ ಗೌಡ ಅವರು ಇಂದು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

Comments


bottom of page