Siddaramaiah: ಉಪ ಚುನಾವಣೆ ಮತ ಎಣಿಕೆ, ಸಚಿವರ ಜೊತೆ ಸಿಎಂ ಮಹತ್ವದ ಸಭೆ
- new waves technology
- Nov 19, 2024
- 2 min read
ಬೆಂಗಳೂರು, ನವೆಂಬರ್ 18: ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಣೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಸಚಿವರ ಮಹತ್ವದ ಸಭೆಯನ್ನು ನಡೆಸಿದ್ದಾರೆ. ಉಪ ಚುನಾವಣೆ ಮತದಾನ ಮುಗಿದ ಬಳಿಕ ಮಹಾರಾಷ್ಟ್ರ ರಾಜ್ಯದ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಸಿದ್ದರಾಮಯ್ಯ ಸಚಿವರ ಬಳಿ ಮತದಾನದ ಮಾಹಿತಿಯನ್ನು ಸಂಗ್ರಹ ಮಾಡಿದ್ದಾರೆ.

ಶಿಗ್ಗಾವಿ, ಚನ್ನಪಟ್ಟಣ ಮತ್ತು ಸಂಡೂರು ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ನವೆಂಬರ್ 23ರ ಶನಿವಾರ ನಡೆಯಲಿದೆ.
ಸೋಮವಾರ ಗೃಹ ಕಛೇರಿ ಕಾವೇರಿಯಲ್ಲಿ ಗುಪ್ತಚರ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಸಚಿವರ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸಚಿವರಾದ ದಿನೇಶ್ ಗುಂಡೂರಾವ್, ಕೆ. ಹೆಚ್. ಮುನಿಯಪ್ಪ, ಡಾ. ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ ಸೇರಿದಂತೆ ಮತ್ತಿತರ ಹಿರಿಯ ಸಚಿವರು ಪಾಲ್ಗೊಂಡಿದ್ದರು.
ಶನಿವಾರ ರಾಜ್ಯದ ಮೂರು ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಹಿರಿಯ ಸಚಿವರ ಜೊತೆ ಮಹತ್ವದ ಸಭೆಯನ್ನು ನಡೆಸಿದರು. ಸೋಮವಾರ ಬೆಂಗಳೂರಿನಲ್ಲಿಯೇ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು ಸಂಜೆ ದಿಢೀರ್ ಆಗಿ ಹಿರಿಯ ಸಚಿವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಚಿವರಿಗೆ ಹಲವು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಸಭೆಯಲ್ಲಿ ರಾಜಕೀಯ ವಿದ್ಯಮಾನಗಳ ಕುರಿತು ಮಾಹಿತಿ ನೀಡಿ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದ ಇರಬೇಕು. ಯಾವುದೇ ವಿವಾದ ಆಗದಂತೆ ಪ್ರತಿಪಕ್ಷಗಳಿಗೆ ತಿರುಗೇಟು ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಸಿದ್ದರಾಮಯ್ಯ ವಕ್ಫ್ ಬೋರ್ಡ್ ಮತ್ತು ರೈತರ ನಡುವಿನ ವಿವಾದ, ಕೋವಿಡ್ ಹಗರಣ, ಎಸ್‌ಐಟಿ ಮುಖ್ಯಸ್ಥರ ನೇಮಕ, ಶಾಸಕರ ಖರೀದಿ ಆರೋಪ, ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನ ಮುಂತಾದ ವಿಚಾರಗಳ ಕುರಿತು ಸಚಿವರ ಜೊತೆ ಚರ್ಚಿಸಿದರು.
ವಿರೋಧ ಪಕ್ಷಗಳ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಬೇಕು. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ರದ್ದು ವಿಚಾರದಲ್ಲಿ, ಗ್ಯಾರಂಟಿ ಯೋಜನೆಗಳ ಕುರಿತು ಅಂಕಿ ಅಂಶ ಸಮೇತವಾಗಿ ಪ್ರತಿಪಕ್ಷಗಳಿಗೆ ಉತ್ತರ ಕೊಡಬೇಕು ಎಂದು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾರ್ಡ್ ರದ್ಧತಿ ಗೊಂದಲದ ಕುರಿತು ಈಗಾಗಲೇ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದು, "ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹರ ಯಾವ ಕಾರ್ಡ್‌ಗಳೂ ರದ್ದಾಗುವುದಿಲ್ಲ. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿ, ಜೆಡಿಎಸ್ ಅಲ್ಲ" ಎಂದು ಹೇಳಿದ್ದಾರೆ.
"ಸಿದ್ದರಾಮಯ್ಯ. 2017ರಲ್ಲಿ 1 ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಕರ್ನಾಟಕ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥಾ ಯೋಜನೆಯನ್ನು ಜಾರಿ ಮಾಡಿದ್ದಾರೆ?. ಗುಜರಾತ್, ಮಧ್ಯ ಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ?" ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.
ಶಿಗ್ಗಾವಿ, ಚನ್ನಪಟ್ಟಣ ಮತ್ತು ಸಂಡೂರು ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಪ್ರತಿಷ್ಠೆ ಚುನಾವಣೆ ಫಲಿತಾಂಶದಲ್ಲಿ ಅಡಗಿದೆ. ಅದರಲ್ಲೂ ಚನ್ನಪಟ್ಟಣದಲ್ಲಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿಗೆ ಹಿನ್ನಡೆ ಉಂಟು ಮಾಡಬೇಕು ಎಂದು ಕಾಂಗ್ರೆಸ್ ನಾಯಕರು ತಂತ್ರ ರೂಪಿಸಿ ಚುನಾವಣಾ ತಂತ್ರವನ್ನು ರೂಪಿಸಿದ್ದರು.
Comments